

ನಾಪತ್ತೆಯಾಗಿದ್ದ 12 ವರ್ಷದ ಬಾಲಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎನ್ನಲಾಗಿದ್ದು, ಮೃತದೇಹವು ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡು ಬಳಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.
ಕೆ.ಸಿ.ರೋಡ್ ಕೋಮರಂಗಳ ನಿವಾಸಿ ಹನೀಫ್ ಎಂಬವರ ಪುತ್ರ ಹಾಕೀಬ್ (12) ಮೃತ ಬಾಲಕ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 9 ಗಂಟೆಗೆ ಹಾಕೀಬ್ ಮದ್ರಸದಿಂದ ಮನೆಗೆ ಬಂದಿದ್ದು, ಬಳಿಕ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ಬಾಲಕ ನಾಪತ್ತೆಯಾಗಿದ್ದ. ಆತನಿಗಾಗಿ ಹುಡುಕಾಟ ನಡೆಸಿದ್ದು, ಈ ವೇಳೆ ಇಲ್ಲಿನ ನಿರ್ಜನ ಪ್ರದೇಶದಲ್ಲಿ ಬಾಲಕನ ಮೃತ ದೇಹ ಪತ್ತೆಯಾಗಿದೆ.
ಈ ಸಂದರ್ಭದಲ್ಲಿ ಸ್ಥಳೀಯರು ಪೊಲೀಸ್ ಕಮಿಷನರ್ ಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಕಮಿಷನರ್ ಶಶಿಕುಮಾರ್ , ಡಿಸಿಪಿ ಹರಿರಾಂ, ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಮತ್ತು ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಬಾಲಕನ ಮೊಬೈಲ್ಗೆ ಬಂದ ಕೊನೆಯ ಕರೆಯ ಆಧಾರದಲ್ಲಿ ಸ್ಥಳೀಯ ಯುವಕನೋರ್ವನನ್ನುಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.