Header Ads
Header Ads
Breaking News

ನಾನು ಟಿಕೆಟ್ ಆಕಾಂಕ್ಷಿಯಲ್ಲ, ಕಾಂಗ್ರೆಸ್ ಹೊಸ ಜಿಲ್ಲಾಧ್ಯಕ್ಷ ಹರೀಶ್‌ಕುಮಾರ್

ರಾಜ್ಯ ವಿಧಾನಸಭೆ, ವಿಧಾನ ಪರಿಷತ್ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ಸ್ಥಾನಗಳಲ್ಲಿ ಜಯಭೇರಿ ಬಾರಿಸುವುದು ನನ್ನ ಗುರಿಯಾಗಿದ್ದು ಈ ನಿಟ್ಟಿನಲ್ಲಿ ಪಕ್ಷವನ್ನು ಸಂಘಟಿಸಿ ಸಿದ್ಧಗೊಳಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜರಗಿದ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ಇನ್ನು ಒಂದು ವರ್ಷದೊಳಗೆ ವಿಧಾನಸಭಾ ಚುನಾವಣೆ ಬರಲಿದೆ. ಕೆಲವೇ ತಿಂಗಳುಗಳಲ್ಲಿ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಇನ್ನೆರಡು ವರ್ಷಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಜಿಲ್ಲೆಯ ಎಲ್ಲ ೮ ವಿಧಾನಸಭಾ ಕ್ಷೇತ್ರಗಳನ್ನು, ಸಂಸತ್ಸದಸ್ಯ ಸ್ಥಾನವನ್ನು, ವಿಧಾನ ಪರಿಷತ್ ಸ್ಥಾನಗಳನ್ನು ಪಕ್ಷ ಪಡೆದುಕೊಳ್ಳುವತ್ತ ನಾವು ಸಾಗಬೇಕಾಗಿದೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಸೇರಿದಂತೆ ಎಲ್ಲರೂ ಶ್ರಮಿಸಬೇಕು. ಬೂತ್ ಮಟ್ಟದಿಂದ ಪಕ್ಷ ಸಂಘಟನೆ ಕಾರ್ಯ ತೀವ್ರಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಹಿರಿಯ ಚೇತನಗಳನ್ನು ಸ್ಮರಿಸಿಕೊಳ್ಳುತ್ತಿದ್ದೇನೆ. ಹಿರಿಯ ನಾಯಕರಾದ ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯಿಲಿ, ಜನಾರ್ದನ ಪೂಜಾರಿ ಹಾಗೂ ಕಳೆದ ೧೦ ವರ್ಷಗಳಿಂದ ಪಕ್ಷದ ಅಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿರ್ವಹಿಸಿದ ರಮಾನಾಥ ರೈ ಅವರ ಸೇವೆಯನ್ನು ಸ್ಮರಿಸುತ್ತಿದ್ದೇನೆ ಎಂದವರು ಹೇಳಿದರು.
ನಾನು ಚುನಾವಣೆಯಲ್ಲಿ ಪಕ್ಷದ ಟಿಕೇಟು ಅಕಾಂಕ್ಷಿಯಲ್ಲ. ಪಕ್ಷ ಸಂಘಟನೆ ನನ್ನ ಗುರಿ. ಅಧ್ಯಕ್ಷ ಪದವಿ ಹೂವಿನ ಹಾಸಿಗೆಯಲ್ಲ. ಮುಳ್ಳಿನ ಹಾಸಿಗೆ ಎಂದು ನನಗೆ ಚೆನ್ನಾಗಿ ತಿಳಿದಿದೆ. ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ನಾನು ಪಕ್ಷದಲ್ಲಿ ಕಳೆದ ೩೮ ವರ್ಷಗಳಿಂದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿಕೊಂಡು ಬಂದಿರುವ ಅನುಭವದ ಹಿನ್ನೆಲೆಯಲ್ಲಿ ನಾನು ಇದನ್ನು ಚೆನ್ನಾಗಿ ನಿರ್ವಹಿಸುತ್ತೇನೆ ಎಂಬ ವಿಶ್ವಾಸವಿದೆ. ಎಲ್ಲರ ಒಮ್ಮತ ಆಯ್ಕೆಯಾಗಿ ಇಂದು ಈ ಉನ್ನತ ಹುದ್ದೆಯನ್ನು ವಹಿಸಿಕೊಂಡಿದ್ದೇನೆ ಎಂದು ಹರೀಶ್ ಕುಮಾರ್ ಹೇಳಿದರು.

Related posts

Leave a Reply