
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 2018-19ನೇ ಸಾಲಿನಿಂದ ಇದುವರೆಗೆ ರೂ. 101 ಕೋಟಿ ಅಧಿಕ ಮೊತ್ತದ ಅನುದಾನ ಬಿಡುಗಡೆಗೊಂಡಿದ್ದು, ಸಮರೋಪಾದಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ತಿಳಿಸಿದರು. ಅವರು ಸುದ್ದಿಗೋಷ್ಠಿಯಲ್ಲಿ ತಮ್ಮ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವಿವರ ನೀಡಿ, ರೂ. 17 ಕೋಟಿ ವೆಚ್ಚದಲ್ಲಿ ರಸ್ತೆ ಮತ್ತು ಸೇತುವೆಗಳ ಅಭಿವೃದ್ಧಿ, ರೂ. 12 ಕೋಟಿ ವೆಚ್ಚದಲ್ಲಿ ಪುತ್ತೂರು- ಉಪ್ಪಿನಂಗಡಿ ಚತುಷ್ಪಥ ರಸ್ತೆ ನಿರ್ಮಾಣ, ಒಟ್ಟು ರೂ. 16.77 ಕೋಟಿ ವೆಚ್ಚದಲ್ಲಿ ಮಳೆಹಾನಿ ಯೋಜನೆಯಡಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಜೀವಂಧರ ಜೈನ್, ಗ್ರಾಮಾಂತರ ಮಂಡಲ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಪುತ್ತೂರು ತಾಲೂಕು ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಆರ್.ಸಿ. ನಾರಾಯಣ ಉಪಸ್ಥಿತರಿದ್ದರು.