Breaking News

ಮುಂದಿನ ವರುಷದ ಕರ್ನಾಟಕ ವಿಧಾನಸಭೆ ಚುನಾವಣೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವ ಮುಂದುವರಿಕೆ

ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಎದುರಿಸಲು ನಿರ್ಧರಿಸಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಜಿ. ಪರಮೇಶ್ವರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸಿ ಬುಧವಾರ ಅಧಿಕೃತ ಆದೇಶ ಹೊರಡಿಸಿದೆ.
ಇತ್ತೀಚೆಗೆ ನಡೆದಿದ್ದ ಉಪ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸನ್ನು ಸಾಧಿಸಿರುವ ಸಿದ್ದರಾಮಯ್ಯ ಅವರ ಮುಂದಾಳತ್ವಕ್ಕೇ ಒಲವು ತೋರಿರುವ ವರಿಷ್ಠರು, ಸಾಮೂಹಿಕ ನಾಯಕತ್ವದ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಿದ್ದರಾಮಯ್ಯ ಅವರ ನೇತೃತ್ವವೇ ಮುಖ್ಯ ಎಂಬುದನ್ನು ಲಿಖಿತ ಆದೇಶ ಪತ್ರದ ಆರಂಭದಲ್ಲೇ ಸ್ಪಷ್ಟಪಡಿಸಿರುವ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ, ಈ ಕುರಿತು ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ದೊರೆಯದಂತೆ ನೋಡಿಕೊಂಡಿದ್ದಾರೆ. ತಕ್ಷಣವೇ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ರಾಜ್ಯದಾದ್ಯಂತ ಪಕ್ಷ ಸಂಘಟನೆಗೆ ಒತ್ತು ನೀಡುವಂತೆ ಪರಮೇಶ್ವರ್ ಅವರಿಗೆ ಸೂಚಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಎಸ್. ಆರ್. ಪಾಟೀಲ ಅವರಿಗೆ ಕಾರ್ಯಾಧ್ಯಕ್ಷ ಸ್ಥಾನ ನೀಡಿ, ಉತ್ತರ ಕರ್ನಾಟಕದ ಜವಾಬ್ದಾರಿಯನ್ನು ವಹಿಸಲಾಗಿದೆ.
ಇಂಧನ ಸಚಿವ ಡಿ. ಕೆ. ಶಿವಕುಮಾರ್ ಅವರನ್ನು ವಿಧಾನಸಭೆ ಚುನಾವಣೆಯ ಪ್ರಚಾರ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ನೇಮಿಸುವ ಮೂಲಕ
ಅಸಮಾಧಾನ ಭುಗಿಲೇಳದಂತೆ ನೋಡಿಕೊಳ್ಳಲಾಗಿದೆ. ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಎ‌ಐಸಿಸಿ ಕಾರ್ಯದರ್ಶಿ ಸ್ಥಾನ ನೀಡಿ ಗೊಂದಲ ನಿವಾರಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮತ್ತೊಬ್ಬ ಆಕಾಂಕ್ಷಿಯಾಗಿದ್ದ ದಲಿತ ಸಮುದಾಯದ ಮುಖಂಡ, ಕೋಲಾರ ಸಂಸದ ಕೆ. ಎಚ್. ಮುನಿಯಪ್ಪ ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತರನ್ನಾಗಿ ನೇಮಿಸಿದ್ದಾರೆ. ಆರು ವರ್ಷಗಳ ಹಿಂದೆ ಜಿ. ಪರಮೇಶ್ವರ್ ಅವರ ಹೆಗಲೇರಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನವು, ಚುನಾವಣೆಯ ವರ್ಷದಲ್ಲಿ ಸ್ಥಾನಪಲ್ಲಟ ಮಾಡದೆ ಅಲ್ಲೇ ಉಳಿದಿದೆ.

Related posts

Leave a Reply