Header Ads
Header Ads
Breaking News

ಡಿ. 18ರಂದು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪುತ್ತೂರಿನಲ್ಲಿ ರೈತರ ಪ್ರತಿಭಟನೆ

ಪುತ್ತೂರು : ‘ಯಾವುದೇ ಷರತ್ತುಗಳಿಲ್ಲದೆ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದು, ಅಡಿಕೆ ಕೊಳೆರೋಗಕ್ಕೆ ತಕ್ಷಣ ಪರಿಹಾರ ನೀಡುವುದು, ಮೊದಲಾದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಇದೇ 18ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ಮಿನಿವಿಧಾನಸೌಧ ಬಳಿ ರೈತರ ಬೃಹತ್ ಪ್ರತಿಭಟನಾ ಸಭೆ ಮತ್ತು ಮನವಿ ಸಲ್ಲಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ರೈತ ಸಂಘ-ಹಸಿರುಸೇನೆಯ ರಾಜ್ಯ ಕಾರ್ಯದರ್ಶಿ ಸಿ.ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ ಅವರು ತಿಳಿಸಿದರು. 

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ ಪುತ್ತೂರಿನ ಬಸ್‌ನಿಲ್ದಾಣದ ಬಳಿಯಿಂದ ಮಿನಿವಿಧಾನಸೌಧ ತನಕ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಬಳಿಕ ಪ್ರತಿಭಟನಾ ಸಭೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ಸರ್ಕಾರಕ್ಕೆ ರೈತರ ಬೇಡಿಕೆಗಳನ್ನೊಳಗೊಂಡ ಮನವಿ ಸಲ್ಲಿಸಲಾಗುವುದು. ರಾಜ್ಯ ರೈತ ಸಂಘ-ಹಸಿರುಸೇನೆಯ ರಾಜ್ಯ ಸಮಿತಿಯ ಕಾರ್ಯಾಧ್ಯಕ್ಷ ಎಚ್.ಆರ್.ಬಸವರಾಜ, ರಾಜ್ಯ ಸಂಚಾಲಕ ರಾಜು ಹಿಟ್ಲೂರು ಮತ್ತಿತರ ರೈತ ನಾಯಕರು ಭಾಗವಹಿಸುವರು ಎಂದರು.

ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ರಾಜ್ಯ ರೈತ ಸಂಘ-ಹಸಿರುಸೇನೆಯ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಶ್ರೀಧರ್ ಶೆಟ್ಟಿ ಬೈಲುಗುತ್ತು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನಪ್ಪ ಗೌಡ ಸವಣೂರು, ಬೆಳ್ತಂಗಡಿ ತಾಲ್ಲೂಕು ಸಮಿತಿಯ ಅಧ್ಯಕ್ಷ ಕೇಶವ ಪೂಜಾರಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಹರಿಣಿ.ವಿ.ರೈ ಆರ್ಯಾಪು ಹಾಜರಿದ್ದರು.

Related posts

Leave a Reply