Header Ads
Breaking News

ಎಸ್.ಡಿ.ಎಂ ಕಾಲೇಜಿನಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ

ಹೊಸ ಪೀಳಿಗೆಯ ಹೆಣ್ಣುಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿ ಅವರ ಸಾಮಥ್ರ್ಯವನ್ನು ಸರ್ವಾಂಗೀಣ ಅಭ್ಯುದಯಕ್ಕೆ ಬಳಸಿಕೊಳ್ಳುವಂಥ ವಾತಾವರಣ ಸೃಷ್ಟಿಯಾಗಬೇಕು ಎಂದು ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಸತೀಶ್ಚಂದ್ರ ಎಸ್. ಅಭಿಪ್ರಾಯಪಟ್ಟರು.

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗವು ಉಜಿರೆ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯ ಪ್ರಯುಕ್ತ ಏರ್ಪಡಿಸಿದ್ದ ವಿವಿಧ ಸ್ಪರ್ಧೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಈಗಲೂ ಹೆಣ್ಣುಮಕ್ಕಳಲ್ಲಿ ಅರಿವಿನ ಕೊರತೆ ಇದೆ. ಸರ್ಕಾರಿ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಅನೇಕರಿಗೆ ಗೊತ್ತೇ ಇರುವುದಿಲ್ಲ. ಹೀಗಾಗಿಯೇ ಅಭಿವೃದ್ಧಿಯ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳುವಲ್ಲಿ ಹೆಣ್ಣುಮಕ್ಕಳು ಹಿನ್ನಡೆ ಅನುಭವಿಸುತ್ತಿದ್ದಾರೆ. ಹೆಣ್ಣುಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಸರ್ಕಾರ ರೂಪಿಸುವ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದವರೆಗೆ ತಲುಪುವುದೇ ಇಲ್ಲ. ಅಭಿವೃದ್ಧಿಯ ವಿವಿಧ ಆಯಾಮಗಳ ಬಗ್ಗೆ ತಿಳಿಸಿಕೊಡುವ ವ್ಯಾಪಕ ಪ್ರಯತ್ನಗಳಾದಾಗ ಮಾತ್ರ ಹೆಣ್ಣುಮಕ್ಕಳು ಸ್ವಾವಲಂಬನೆಯ ಹಾದಿಯನ್ನು ಕಂಡುಕೊಳ್ಳುವುದಕ್ಕೆ ಸಾಧ್ಯವಾಗುತ್ತದೆ ಎಂದರು.

ಭಾರತದಂಥ ರಾಷ್ಟ್ರದ ಕೆಲವು ರಾಜ್ಯಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳು ಹಿಂದುಳಿದಿದ್ದಾರೆ. ಆರೋಗ್ಯ, ಶಿಕ್ಷಣ ಮತ್ತು ಆಡಳಿತಾತ್ಮಕ ವಲಯಗಳಲ್ಲಿ ಹೆಣ್ಣುಮಕ್ಕಳ ಸಾಮಥ್ರ್ಯ ವ್ಯಾಪಕವಾಗಿ ಬಳಕೆಯಾಗಿ ಆ ಮೂಲಕ ಸರ್ವಾಂಗೀಣ ಅಭಿವೃದ್ಧಿಯನ್ನು ಸಾಧ್ಯವಾಗಿಸುವ ಸ್ಪಷ್ಟ ನೀತಿ ರೂಪುಗೊಂಡು ಅದು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಮಾರಿ ಅನಘ ಶಾಲಾ-ಕಾಲೇಜು ಅಧ್ಯಯನದ ಹಂತಗಳಿಂದಲೇ ದೇಶದ ಹೆಮ್ಮೆಯನ್ನು ಹೆಚ್ಚಿಸುವಂಥ ಅಪೂರ್ವ ಸಾಧನೆಯ ಯಾನದೊಂದಿಗೆ ಗುರುತಿಸಿಕೊಳ್ಳುವ ಕನಸುಗಳನ್ನು ಸಾಕಾರಗೊಳಿಸಿಕೊಳ್ಳುವುದರ ಕಡೆಗೆ ವಿದ್ಯಾರ್ಥಿನಿಯರು ಗಮನಹರಿಸಬೇಕು ಎಂದರು.

ಮುಖ್ಯ ಅತಿಥಿಗಳಾಗಿದ್ದ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಬಿ. ಕುಸುಮಾಧರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿ, ಉಜಿರೆ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ.ಯತೀಶ್‍ಕುಮಾರ್ ಎಂ.ಎಸ್. ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತ ವ್ಯವಸ್ಥೆಯ ಮೂಲಕ ನಿರ್ವಹಿಸಲ್ಪಡುವ ವಿವಿಧ ಯೋಜನಾ ಕಾರ್ಯಕ್ರಮಗಳ ವಿವರಗಳನ್ನು ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಜಪಾನ್ ಸಿ.ಡಬ್ಲ್ಯೂ.ಬಿ ಕನ್ಸಲ್ಟೆಂಟ್ ಮನೋರಮಾ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಎಸ್.ಡಿ.ಎಂ ಕಾಲೇಜಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ಭಾಸ್ಕರ ಹೆಗಡೆ ಅವರು ಶೈಕ್ಷಣಿಕ ಸಂಸ್ಥೆಗಳು ಹೆಣ್ಣುಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಪ್ರಜ್ಞೆ ಮೂಡಿಸುವ ಹೊಣೆಗಾರಿಕೆಯನ್ನು ನಿಭಾಯಿಸುವ ವೈಶಿಷ್ಟ್ಯತೆಯನ್ನು ವಿಶ್ಲೇಷಿಸಿದರು. ಉಜಿರೆ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ವಂದಿಸಿದರು.

Related posts

Leave a Reply

Your email address will not be published. Required fields are marked *