
ಪುತ್ತೂರು: ಕೊರೋನಾ ಮಹಾಮಾರಿಯು ದೇಶವನ್ನು ಪೀಡಿಸಿದ ಬಳಿಕ ಜನರಲ್ಲಿ ಹೆಚ್ಚಿನ ಆರೋಗ್ಯ ಜಾಗೃತಿ ಮೂಡಿದೆ. ಆಸ್ಪತ್ರೆಗಳ ಮಹತ್ವ ಜನರಿಗೆ ಅರ್ಥವಾಗಿದೆ. ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೆ ತರುವ ಮೂಲಕ ಕಟ್ಟಕಡೆಯ ವ್ಯಕ್ತಿಗೂ ವೈದ್ಯಕೀಯ ಸೌಲಭ್ಯ ದೊರೆಯುವಂತೆ ಮಾಡಲಾಗಿದೆ. ಪ್ರಧಾನಮಂತ್ರಿ ಜನೌಷಧಿ ಮಳಿಗೆಗಳು ಬಡರೋಗಿಗಳ ಆಶಾಕಿರಣಗಳಾಗಿವೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದರು.
ಅವರು ಮಂಗಳವಾರ ನಗರದ ಬೊಳುವಾರಿನಲ್ಲಿರುವ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ 18ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಮಂಗಳೂರು ಕೆಎಂಸಿ ಆಸ್ಪತ್ರೆಯ ಸಹಯೋಗದಲ್ಲಿ ಆರಂಭವಾದ ಪ್ರಗತಿ ಹಾಸ್ಪಿಟಲ್ ಎಮರ್ಜೆನ್ಸಿ ಮೆಡಿಸಿನ್ ಘಟಕವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭ ಪ್ರಗತಿ ಪ್ಯಾರಾ ಮೆಡಿಕಲ್ ಸಂಸ್ಥೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಮೂರನೇ ರ್ಯಾಂಕ್ ಪಡೆದ ದೀಕ್ಷಿತಾ ಅವರನ್ನು ಶಾಸಕ ಮಠಂದೂರು ಸನ್ಮಾನಿಸಿದರು.
ವೇದಿಕೆಯಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಆನಂದವೇಣುಗೋಪಾಲ್,ಪುತ್ತೂರು ನಗರಸಭಾಧ್ಯಕ್ಷ ಕೆ. ಜೀವಂಧರ ಜೈನ್, ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಯು. ಶ್ರೀಪತಿ ರಾವ್ ಮತ್ತಿತರರು ಉಪಸ್ಥಿತರಿದ್ದರು.