Header Ads
Breaking News

ಜಾರಕಿಹೊಳಿ ಸಿಡಿ ಪ್ರಕರಣ, ಪಕ್ಷದ ಹೈಕಮಾಂಡ್‍ಗೆ ಬಿಟ್ಟ ವಿಚಾರ : ಸಂಸದ ಬಿ ವೈ ರಾಘವೇಂದ್ರ ಹೇಳಿಕೆ

ದೇಶದ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಷ್ಟದಲ್ಲಿರುವ ಬ್ಯಾಂಕ್‍ಗಳನ್ನು ಲಾಭದಲ್ಲಿರುವ ಬ್ಯಾಂಕ್‍ಗಳೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ಮಾಡಿದ್ದಾರೆ. ಇಷ್ಟೆಲ್ಲಾ ಮಾಡಿರುವುದು ದೇಶದ ಒಳಿತಿಗಾಗಿ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು.

ಅವರು ಕೊಲ್ಲೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕರಾವಳಿ ಬ್ಯಾಂಕ್‍ಗಳನ್ನು ವಿಲೀನಗೊಳಿಸಿದರೂ ಈ ಭಾಗದ ಸಂಸದರು ವಿರೋಧಿಸದ ಬಗೆಗಿನ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದರು.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಕುರಿತಂತೆ ಕೂಡಲೇ ರಾಜ್ಯ ಮುಜುರಾಯಿ ಸಚಿವ ಶ್ರೀನಿವಾಸ ಪೂಜಾರಿಯವರ ಜತೆ ಮಾತನಾಡಿ ಶೀಘ್ರವೇ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮಾಡಲಾಗುವುದು. ಈ ಕುರಿತಂತೆ ಯಾಕೆ ವಿಳಂಬವಾಗಿದೆ ಎನ್ನುವುದರ ಬಗ್ಗೆಯೂ ಮಾಹಿತಿ ಪಡೆಯುತ್ತೇನೆ ಎಂದರು.

ರಮೇಶ್ ಜಾರಕಿಹೊಳಿ ಅವರ ಸಿಡಿ ವಿಚಾರಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳುವ ಬಗ್ಗೆ ಪಕ್ಷದ ಹೈಕಮಾಂಡ್‍ಗೆ ಬಿಟ್ಟ ವಿಚಾರ. ಈ ಬಗ್ಗೆ ಈಗಾಗಲೇ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದ್ದಾರೆ. ಸೂಕ್ತ ನಿರ್ಧಾರವನ್ನು ಪಕ್ಷದ ಅಧ್ಯಕ್ಷರು, ಮುಖ್ಯಮಂತ್ರಿಗಳು ಕೈಗೊಳ್ಳುತ್ತಾರೆ ಎಂದು ಸಂಸದರು ಸ್ಪಷ್ಟಪಡಿಸಿದರು.

Related posts

Leave a Reply

Your email address will not be published. Required fields are marked *